ಪ್ರಕಟಣಾ ದಿನಾಂಕ:
06 NOV 2026 8:48PM by PIB Bengaluru
ಸನ್ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಇಂದು ತುಮಕೂರು ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಹಾಗೂ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ರಸ್ತೆ ಮೇಲ್ಸೇತುವೆಗಳು (ROBs) ಮತ್ತು ರಸ್ತೆ ಕೆಳಸೇತುವೆಗಳ (RUBs) ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿದರು.

ಮಾನ್ಯ ಸಚಿವರು ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 58 (ನಿಟ್ಟೂರು-ಮೈಸೂರು ಗೇಟ್) ಮತ್ತು ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 59 (ನಂದಿಹಳ್ಳಿ ಗೇಟ್) ಗಳ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆಗಳ ಕಾಮಗಾರಿಗಳನ್ನು ಪರಿಶೀಲಿಸಿದರು. ಅಲ್ಲದೆ, ಗುಬ್ಬಿ ರೈಲ್ವೆ ನಿಲ್ದಾಣದ ಯಾರ್ಡ್‌ನಲ್ಲಿ ಅಂದಾಜು ₹19.34 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಲಘು ರಸ್ತೆ ಮೇಲ್ಸೇತುವೆ (Light ROB) ಕಾಮಗಾರಿಯನ್ನೂ ವೀಕ್ಷಿಸಿದರು.

ನಂತರ, ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 48 (ಕಳ್ಳಿಪಾಳ್ಯ ಗೇಟ್) ಮತ್ತು ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 50 (ಬಿಳಿಪಾಳ್ಯ ಗೇಟ್) ಗಳ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಕೆಳಸೇತುವೆಗಳ ಕಾಮಗಾರಿಗಳನ್ನು ಪರಿಶೀಲಿಸಿದರು. ಇದರೊಂದಿಗೆ, ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 56 (ಬೆಂಚಗೆರೆ ಗೇಟ್), ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 46 (ಮಲ್ಲಸಂದ್ರ ಗೇಟ್), ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 39 (ಬಟವಾಡಿ ಗೇಟ್), ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 38 (ಬಡ್ಡಿಹಳ್ಳಿ ಗೇಟ್), ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 35 (ಮೈದಾಳ ಗೇಟ್) ಹಾಗೂ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 33 (ಪಂಡಿತನಹಳ್ಳಿ ಗೇಟ್) ಗಳ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆಗಳ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ಕಾಮಗಾರಿಗಳಲ್ಲಿ ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಹಾಗೂ ನಿಗದಿಪಡಿಸಿರುವ ಅವಧಿಯೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶ್ರೀ ವಿ. ಸೋಮಣ್ಣ ಅವರು ಸೂಚನೆ ನೀಡಿದರು. ಈ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳು ಪೂರ್ಣಗೊಂಡ ನಂತರ ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಿಲ್ಲದೆ ಸುಗಮ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ರಸ್ತೆ ಬಳಕೆದಾರರು ಹಾಗೂ ರೈಲ್ವೆ ಕಾರ್ಯಾಚರಣೆಗಳ ಸುರಕ್ಷತೆಯೂ ಹೆಚ್ಚಲಿದೆ.
ಇದಕ್ಕೂ ಮೊದಲು, ಮಾನ್ಯ ಸಚಿವರು ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 88 ಮತ್ತು ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 86 ರ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆಗಳ ಕಾಮಗಾರಿಗಳನ್ನು ಹಾಗೂ ತಿಪಟೂರು ರೈಲ್ವೆ ನಿಲ್ದಾಣದಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ತುಮಕೂರು ಗ್ರಾಮಾಂತರ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಬಿ. ಸುರೇಶ್ ಗೌಡ, ತುಮಕೂರು ನಗರ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಜಿ.ಬಿ. ಜ್ಯೋತಿ ಗಣೇಶ್, ಮುಖ್ಯ ಎಂಜಿನಿಯರ್ (ನಿರ್ಮಾಣ) ಶ್ರೀ ಪ್ರಸಾದ್, ಉಪ ಮುಖ್ಯ ಎಂಜಿನಿಯರ್ (ನಿರ್ಮಾಣ) ಶ್ರೀ ಸೂರಜ್ ಕುಮಾರ್, ಉಪ ಮುಖ್ಯ ಎಂಜಿನಿಯರ್ (ನಿರ್ಮಾಣ) ಶ್ರೀ ರಜತ್, ಬೆಂಗಳೂರು ವಿಭಾಗದ ಹಿರಿಯ ವಿಭಾಗೀಯ ಎಂಜಿನಿಯರ್ ಶ್ರೀ ಹರ್ಷಿತ್ ಗುಪ್ತಾ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
******